Saturday, 29 November 2014

ಡಿ.01 ರಂದು ವಿಶ್ವ ಏಡ್ಸ್ ದಿನಾಚರಣೆ : ಜಾಗೃತಿ ಜಾಥಾ


ಕೊಪ್ಪಳ,ನ.29(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸೊಸೈಟಿ ಬೆಂಗಳೂರು, ರೆಡ್ ರಿಬ್ಬನ್ ಕ್ಲಬ್‍ಗಳು, ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಕಾನೂನು ಸೇವೆಗಳ ಪ್ರಾಧಿಕಾರ ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ಡಿ.01 ರಂದು ವಿಶ್ವ ಏಡ್ಸ್ ದಿನಾಚರಣೆಯ ಅಂಗವಾಗಿ ವಿವಿಧ ಕಾರ್ಯಕ್ರಮಗಳು ಜರುಗಲಿವೆ.
ಅಂದು ಬೆಳಿಗ್ಗೆ 8 ಗಂಟೆಗೆ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದ್ದು, ಜಾಥಾ ಕೊಪ್ಪಳ ನಗರದ ಹಳೆ ಜಿಲ್ಲಾ ಆಸ್ಪತ್ರೆ ಆವರಣದಿಂದ ಹೊರಟು ಅಶೋಕ ವೃತ್ತ, ಜವಾಹರ ರಸ್ತೆ, ಗಡಿಯಾರ ಕಂಬ, ಸಿಂಪಿ ಲಿಂಗಣ್ಣ ರಸ್ತೆ, ಕೇಂದ್ರ ಬಸ್ ನಿಲ್ದಾಣದ ಮೂಲಕ ಹಳೆ ಜಿಲ್ಲಾ ಆಸ್ಪತ್ರೆಗೆ ಆಗಮಿಸಲಿದೆ.  ಜಾಥಾದಲ್ಲಿ ಕೋಲಾಟ ಹಾಗೂ ಗೀಗೀ ಪದ ಕಲಾ ತಂಡಗಳಿಂದ ಹೆಚ್.ಐ.ವಿ. ಕುರಿತು ಜಾಗೃತಿ ಮೂಡಿಸಲಾಗುವುದು.
ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಸಮಾರಂಭ ಅಂದು ಬೆಳಿಗ್ಗೆ 11 ಗಂಟೆಗೆ ಹಳೇ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಜರುಗಲಿದ್ದು, ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ. ದಶರಥ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಅಧ್ಯಕ್ಷತೆಯನ್ನು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ|| ಎಸ್.ಬಿ. ದಾನರೆಡ್ಡಿ ಅವರು ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಶ್ರೀಕಾಂತ ಆರ್.ಬಾಸೂರು, ಲಾ ಅಕಾಡೆಮಿ ಅಧ್ಯಕ್ಷೆ ಸಂಧ್ಯಾ ಬಿ.ಮಾದಿನೂರು, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎ.ವಿ.ಕಣವಿ, ಜಿಲ್ಲಾ ಸರ್ಕಾರಿ ವಕೀಲ ಬಿ.ಶರಣಪ್ಪ, ಜಿಲ್ಲಾಸ್ಪತ್ರೆಯ ಎಆರ್‍ಟಿ ವೈದ್ಯಾಧಿಕಾರಿ ಡಾ|| ರೇಖಾ ಎಂ. ಅವರು ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
Post a Comment