Tuesday, 18 October 2016

ಶುದ್ಧ ಕುಡಿಯುವ ನೀರು ಘಟಕಗಳ ವಾರ್ಷಿಕ ನಿರ್ವಹಣೆಗೆ ಜಿ.ಪಂ. ಅಧ್ಯಕ್ಷರ ಸೂಚನೆ

ಕೊಪ್ಪಳ ಅ. 18 (ಕರ್ನಾಟಕ ವಾರ್ತೆ): ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ ವತಿಯಿಂದ ಸ್ಥಾಪಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಆಯಾ ಗ್ರಾಮ ಪಂಚಾಯತಿಯವರು ಒಂದು ತಿಂಗಳ ಒಳಗಾಗಿ ಹಸ್ತಾಂತರಿಸಿಕೊಂಡು, ಅವುಗಳನ್ನು ವಾರ್ಷಿಕ ನಿರ್ವಹಣೆಗೆ ಏಜೆನ್ಸಿಯನ್ನು ನಿಗದಿಪಡಿಸಲು ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾ ಪಂಚಾಯತಿ ಅಧ್ಯಕ್ಷ ಶೇಖರಪ್ಪ ನಾಗರಳ್ಳಿ ಅವರು ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಿದರು.
 
      ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮಂಗಳವಾರದಂದು ಏರ್ಪಡಿಸಲಾಗಿದ್ದ ಜಿ.ಪಂ. ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
 
     ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಈಗಾಗಲೆ ಜಿಲ್ಲಾ ಪಂಚಾಯತಿ ವತಿಯಿಂದ ಶುದ್ಧ ಕುಡಿಯುವ ನೀರು ಘಟಕಗಳನ್ನು ಸ್ಥಾಪಿಸಿ, ಕೇವಲ 02 ರೂ. ಗಳಿಗೆ ಒಂದು ಕ್ಯಾನ್ ನಂತೆ ಸಾರ್ವಜನಿಕರಿಗೆ ಪೂರೈಕೆ ಮಾಡಲಾಗುತ್ತಿದೆ.  ಆದರೆ ಹಲವು ಗ್ರಾಮಗಳಲ್ಲಿನ ಶುದ್ಧ ಕುಡಿಯುವ ನೀರಿನ ಘಟಕಗಳು ನಿರ್ವಹಣೆಯ ಕೊರತೆಯಿಂದ ಕಾರ್ಯ ನಿರ್ವಹಿಸುತ್ತಿಲ್ಲವಾದರೆ, ಇನ್ನು ಕೆಲವೆಡೆ, ಪ್ರತಿ ಕ್ಯಾನ್‍ಗೆ 06 ರೂ. ಗಳವರೆಗೂ ದರ ವಿಧಿಸಲಾಗುತ್ತಿದೆ.  ಇದರಿಂದ ಗ್ರಾಮೀಣ ಪ್ರದೇಶಗಳ ಜನರಿಗೆ ಶುದ್ಧ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ ಎಂದು ಕೆಲ ಜಿ.ಪಂ. ಸದಸ್ಯರು ಆರೋಪಿಸಿದರು.  ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಪಂಚಾಯತಿ ಅಧ್ಯಕ್ಷರು, ಗ್ರಾಮೀಣ ಪ್ರದೇಶಗಳಲ್ಲಿನ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಗ್ರಾಮ ಪಂಚಾಯತಿಗಳಿಗೆ ಹಸ್ತಾಂತರಿಸಿಕೊಂಡು, ಖಾಸಗಿ ಏಜೆನ್ಸಿಗಳಿಂದ ವಾರ್ಷಿಕ ನಿರ್ವಹಣೆ ಒಪ್ಪಂದವನ್ನು ಮಾಡಿಕೊಳ್ಳುವ ಮೂಲಕ ನಿರ್ವಹಣೆ ಮಾಡುವುದು ಸೂಕ್ತ.  ಈ ನಿಟ್ಟಿನಲ್ಲಿ ಒಂದು ತಿಂಗಳ ಒಳಗಾಗಿ ಈ ಕಾರ್ಯವನ್ನು ಪೂರ್ಣಗೊಳಿಸುವಂತೆ ತಾಲೂಕಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಜಿ.ಪಂ. ಅಧ್ಯಕ್ಷ ಶೇಖರಪ್ಪ ನಾಗರಳ್ಳಿ ಅವರು ಸೂಚನೆ ನೀಡಿದರು.
ಕುಡಿಯುವ ನೀರು ಸಮಸ್ಯೆಗೆ ಸ್ಪಂದಿಸಿ : ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಈಗಾಗಲೆ ಕುಡಿಯುವ ನೀರಿನ ತೊಂದರೆ ಕಂಡುಬರುತ್ತಿದ್ದು, ಕಳೆದ ಬೇಸಿಗೆಯಲ್ಲಿ ಕೈಗೊಂಡ ತುರ್ತು ಕುಡಿಯುವ ನೀರು ಕಾಮಗಾರಿಗಳಿಗೆ ಸಂಬಂಧಿಸಿದ ಬಿಲ್ ಗಳನ್ನು ಪಾವತಿಸಿಲ್ಲ.  ಅನುದಾನ ಬಿಡುಗಡೆಯ ಭರವಸೆಯೊಂದಿಗೆ ಕಾಮಗಾರಿಯನ್ನು ಪೂರ್ಣಗೊಳಿಸಿ, ನೀರು ಪೂರ್ಯಕೆ ಮಾಡಲಾಗುತ್ತಿದೆ.  ಕೂಡಲೆ ಅನುದಾನ ಒದಗಿಸಿ, ಬಾಕಿ ಬಿಲ್ ಪಾವತಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು.  ಕೆಲ ಗ್ರಾಮಗಳಲ್ಲಿ ಹೊಸದಾಗಿ ಬೋರ್‍ವೆಲ್‍ಗಳನ್ನು ಕೊರೆಯಿಸಿ, ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು ಎಂದು ಜಿ.ಪಂ.ನ ಕೆಲ ಸದಸ್ಯರು ಹೇಳಿದರು.  ಮುಂಬರುವ ದಿನಗಳನ್ನು ಗಮನದಲ್ಲಿರಿಸಿಕೊಂಡು, ಈಗಾಗಲೆ ಸಮಸ್ಯಾತ್ಮಕ ಗ್ರಾಮಗಳ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ.  ಅಲ್ಲದೆ ಬರುವ ಮಾರ್ಚ್ ಅಂತ್ಯದವರೆಗೆ ಕೈಗೊಳ್ಳಬೇಕಾದ ಕುಡಿಯುವ ನೀರಿನ ಯೋಜನೆಗಳ ಕುರಿತು ಈಗಾಗಲೆ ಕ್ರಿಯಾ ಯೋಜನೆಯನ್ನು ರೂಪಿಸಲಾಗಿದ್ದು, ಸಂಬಂಧಪಟ್ಟ ಜಿಲ್ಲಾ ಪಂಚಾಯತಿ ಸದಸ್ಯರ ಗಮನಕ್ಕೆ ತಂದು, ಅನುಮೋದನೆ ಪಡೆಯಲಾಗುವುದು.  ಒಟ್ಟಾರೆ ಬರುವ ದಿನಗಳಲ್ಲಿ ಜನರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರರು ಸಭೆಗೆ ವಿವರಣೆ ನೀಡಿದರು.  ಕುಡಿಯುವ ನೀರಿನ ಯಾವುದೇ ದೂರುಗಳಿಗೆ ಕೂಡಲೆ ಸ್ಪಂದಿಸುವಂತೆ ಜಿಲ್ಲಾ ಪಂಚಾಯತಿ ಅಧ್ಯಕ್ಷರು ಸೂಚನೆ ನೀಡಿದರು.
ನಾಯಿ ಕಡಿತಕ್ಕೆ ಲಸಿಕೆಯ ಕೊರತೆ : ಜಿಲ್ಲೆಯ ಅನೇಕ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಔಷಧಿಗಳ ಕೊರತೆ ಇದ್ದು, ವೈದ್ಯರು ಹೊರಗಡೆ ಔಷಧಿ ತರಲು ಚೀಟಿ ಬರೆದು ಕೊಡುತ್ತಿರುವ ಬಗ್ಗೆ ವ್ಯಾಪಕವಾಗಿ ದೂರುಗಳು ಬರುತ್ತಿವೆ.  ನಾಯಿ ಕಡಿತಕ್ಕಂತೂ, ಸರ್ಕಾರಿ ಆಸ್ಪತ್ರೆಗಳಲ್ಲಿ ಚುಚ್ಚುಮದ್ದು ಔಷಧಿ ಲಭ್ಯವಿಲ್ಲವೆಂದು ರೋಗಿಗಳನ್ನು ವೈದ್ಯರು ಸಾಗಹಾಕುತ್ತಿದ್ದಾರೆ.  ಪರಿಸ್ಥಿತಿ ಹೀಗಾದರೆ, ಬಡ ರೋಗಿಗಳಿಗೆ ಚಿಕಿತ್ಸೆ ಲಭಿಸುವುದ ಹೇಗೆ.  ಇನ್ನು ರೋಗಿಗಳಿಗೆ ಆ್ಯಂಬುಲೆನ್ಸ್ ಸೇವೆ ಒದಗಿಸಲು ಆಸ್ಪತ್ರೆಗಳು ಸ್ಪಂದಿಸುತ್ತಿಲ್ಲ.  ರೋಗಿಗಳ ಪ್ರಾಣದ ಬಗ್ಗೆ ವೈದ್ಯರು ಲಕ್ಷ್ಯ ಕೊಡುತ್ತಿಲ್ಲ. ಇನ್ನು ಆಸ್ಪತ್ರೆಗಳ ಆವರಣದಲ್ಲಿ ಸ್ವಚ್ಛತೆ ಎಂಬುದೇ ಇಲ್ಲ.  ಸೊಳ್ಳೆ ವಾಹಕ ರೋಗಗಳ ಹರಡುವಿಕೆ ಹೆಚ್ಚಾಗುತ್ತಿದ್ದರೂ, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ.  ಅಧಿಕಾರಿಗಳು ಆಸ್ಪತ್ರೆಗಳಲ್ಲಿನ ಸಮಸ್ಯೆಗಳ ನಿವಾರಣೆಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಜಿಲ್ಲಾ ಪಂಚಾಯತಿ ಸದಸ್ಯರುಗಳು ಆರೋಗ್ಯ ಇಲಾಖೆ ಅಧಿಕಾರಿಗಳ ಕಾರ್ಯ ವೈಖರಿಗೆ ಅಸಮಾಧಾನ ವ್ಯಕ್ತಪಡಿಸಿದರು.  ಇದಕ್ಕೆ ಉತ್ತರಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ ಅವರು, ನಾಯಿ ಕಡಿತಕ್ಕೆ ಲಸಿಕೆಯ ಕೊರತೆ ಕೇವಲ ಜಿಲ್ಲೆಯಲ್ಲಷ್ಟೇ ಅಲ್ಲ ರಾಜ್ಯಾದ್ಯಂತ ಕೊರತೆ ಇದೆ.  ಆರೋಗ್ಯ ಇಲಾಖೆ ವತಿಯಿಂದಲೇ ಖಾಸಗಿ ಸಂಸ್ಥೆಗಳಿಂದ ಖರೀದಿಸಿ, ರೋಗಿಗಳಿಗೆ ಒದಗಿಸುವಂತೆ ಇಲಾಖೆ ಸುತ್ತೋಲೆ ಹೊರಡಿಸಿದೆ ಎಂದರು.  ಆದರೆ ಈ ಸುತ್ತೋಲೆಯನ್ವಯ ಜಿಲ್ಲೆಯಲ್ಲಿ ಕ್ರಮ ಆಗುತ್ತಿಲ್ಲ ಎಂದು ಜಿ.ಪಂ. ಸದಸ್ಯರು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.
ರಸ್ತೆ ಬದಿ ನೆಡುತೋಪು ತನಿಖೆಗೆ ಸಮಿತಿ : ಸಾಮಾಜಿಕ ಅರಣ್ಯ ವಿಭಾಗದಿಂದ ಜಿಲ್ಲೆಯ ಗ್ರಾಮೀಣ ರಸ್ತೆಗಳಲ್ಲಿ ವಿಶೇಷ ಅಭಿವೃದ್ಧಿ ಯೋಜನೆ ಹಾಗೂ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗಖಾತ್ರಿ ಯೋಜನೆಯಡಿ ರಸ್ತೆ ಬದಿ ನೆಡುತೋಪು ಕಾರ್ಯಕ್ರಮದಡಿ ಗಿಡಗಳನ್ನು ನೆಡಲಾಗಿದೆ.  ಆದರೆ ವಾಸ್ತವವಾಗಿ ನೆಡಲಾಗಿರುವ ಗಿಡಗಳ ಸಂಖ್ಯೆ ಅತ್ಯಲ್ಪವಿದೆ.  ಪ್ರಕೃತಿಯ ಸಮತೋಲನ ಕಾಯ್ದುಕೊಳ್ಳುವಲ್ಲಿ ಅರಣ್ಯ ಇಲಾಖೆಯ ಪಾತ್ರ ಮಹತ್ವದ್ದಾಗಿದೆ. ಕೇವಲ ಗಿಡಗಳನ್ನು ನೆಡಲಾಗುತ್ತಿದೆಯೇ ಹೊರತು, ಅವುಗಳನ್ನು ಬೆಳೆಸುವ ಕಾರ್ಯ ಆಗುತ್ತಿಲ್ಲ.  ಇದರಿಂದ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ಕೆಲ ಜಿ.ಪಂ. ಸದಸ್ಯರು ಆರೋಪಿಸಿದರು.  ಇದಕ್ಕೆ ಪ್ರತಿಕ್ರಿಯಿಸಿದ ಜಿ.ಪಂ. ಅಧ್ಯಕ್ಷರು, ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಹಾಗೂ ಯೋಜನಾ ನಿರ್ದೇಶಕರು ಹಾಗೂ ಆಯಾ ತಾಲೂಕಿನ ಓರ್ವ ಜಿ.ಪಂ. ಸದಸ್ಯರನ್ನು ಒಳಗೊಂಡ ಸಮಿತಿಯಿಂದ ತನಿಖೆ ನಡೆಸಿ, ವರದಿ ಪಡಯಲಾಗುವುದು ಎಂದು ಜಿಲ್ಲಾ ಪಂಚಾಯತಿ ಅಧ್ಯಕ್ಷರು ಈ ಸಂದರ್ಭದಲ್ಲಿ ಭರವಸೆ ನೀಡಿದರು.
     ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್. ರಾಮಚಂದ್ರನ್, ಜಿ.ಪಂ. ಉಪಾಧ್ಯಕ್ಷೆ ಲಕ್ಷ್ಮಮ್ಮ ನೀರಲೂಟಿ, ಉಪಕಾರ್ಯದರ್ಶಿ ಎನ್.ಕೆ. ತೊರವಿ, ಯೋಜನಾ ನಿರ್ದೇಶಕ ರವಿ ಬಸರಿಹಳ್ಳಿ ಸೇರಿದಂತೆ ಜಿಲ್ಲಾ ಪಂಚಾಯತಿ ಸದಸ್ಯರುಗಳು, ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷರು, ತಾ.ಪಂ. ಅಧ್ಯಕ್ಷರುಗಳು, ನಾನಾ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.
Post a Comment