Friday, 24 March 2017

ಮಹಿಳೆ ಮತ್ತು ಮಕ್ಕಳ ರಕ್ಷಣೆಯಲ್ಲಿ ಕುಟುಂಬದ ಪಾತ್ರ ಮಹತ್ವದ್ದು


ಕೊಪ್ಪಳ ಮಾ. 24 (ಕರ್ನಾಟಕ ವಾರ್ತೆ): ಇತ್ತೀಚಿನ ದಿನಗಳಲ್ಲಿ ಮಹಿಳೆ ಮತ್ತು ಮಕ್ಕಳ ಸಾಗಾಣಿಕ ಹೆಚ್ಚಾಗುತ್ತಿದ್ದು, ಪ್ರಾಥಮಿಕವಾಗಿ ಮಹಿಳೆ ಮತ್ತು ಮಕ್ಕಳ ರಕ್ಷಣೆಯ ವಿಷಯದಲ್ಲಿ ಕುಟುಂಬಗಳ ಪಾತ್ರ ಬಹು ಮುಖ್ಯವಾಗಿದೆ ಎಂದು ಮಕ್ಕಳ ವಿಶೇಷ ಪೊಲೀಸ್ ಘಟಕದ ಅಧಿಕಾರಿ ಜಗದೀಶ್ವರಯ್ಯ ಹಿರೇಮಠ ಹೇಳಿದರು.  
       ಜಿಲ್ಲಾಡಳಿತ,  ಜಿಲ್ಲಾ ಪೋಲಿಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕೊಪ್ಪಳ ಇವರÀ ಸಂಯುಕ್ತಾಶ್ರಯದಲ್ಲಿ ಯಲಬುರ್ಗಾ ತಾಲೂಕು ದ್ಯಾಂಪುರ ಗ್ರಾಮದ ಈಶ್ವರ ದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ “ಮಕ್ಕಳ ಹಕ್ಕುಗಳು ಹಾಗೂ ಮಕ್ಕಳ ಪರವಾದ ಕಾನೂನುಗಳ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
     ಪ್ರಸ್ತುತ ಸಮಾಜದಲ್ಲಿ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಪ್ರಕರಣಗಳು ನಡೆಯುತ್ತಿರುವುದು ನಾಗರೀಕ ಸಮಾಜ ತಲೆತಗ್ಗಿಸುವ ಸಂಗತಿಯಾಗಿದೆ.  ಇತ್ತೀಚಿನ ದಿನಗಳಲ್ಲಿ ಮಹಿಳೆ ಮತ್ತು ಮಕ್ಕಳ ಸಾಗಾಣಿಕ ಹೆಚ್ಚಾಗುತ್ತಿದ್ದು, ಪ್ರಾಥಮಿಕವಾಗಿ ಮಹಿಳೆ ಮತ್ತು ಮಕ್ಕಳ ರಕ್ಷಣೆ ಹೆಚ್ಚಿನ ಜವಬ್ದಾರಿ ಮೂಲತಃ ಕುಟುಂಬದ್ದಾಗಿದ್ದು, ಅವರ ಜವಾಬ್ದಾರಿಯೂ ಹೆಚ್ಚಾಗಿದೆ.  ಜಿಲ್ಲೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕವನ್ನು ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿಗಳ ಕಛೇರಿಯಲ್ಲಿ  ಸ್ಥಾಪಿಸಲಾಗಿದೆ. ಅಲ್ಲದೇ ಪೊಲೀಸ್ ಠಾಣೆಯ ಠಾಣಾಧಿಕಾರಿಗಳನ್ನು ಮಕ್ಕಳ ಕಲ್ಯಾಣಾಧಿಕಾರಿಗಳೆಂದು ನೇಮಿಸಿದ್ದು, ಆರೈಕೆ ಮತ್ತು ಪೋಷಣೆ ಅವಶ್ಯಕತೆಯಿರುವ ಯಾವುದೇ ಮಗುವನ್ನು ಯಾರೇ ವ್ಯಕ್ತಿಗಳು ಆರೈಕೆ ಮತ್ತು ಪೋಷಣೆಗಾಗಿ ಮಕ್ಕಳನ್ನು ಹಾಜರುಪಡಿಸಬಹುದಾಗಿದೆ ಎಂದು ತಿಳಿಸಿದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ  ರೋಹಿಣಿ ಕೊಟಗಾರ ಮಾತನಾಡಿ,          ಮಕ್ಕಳ ಹಕ್ಕುಗಳಾದ ಬದುಕುವ ಹಕ್ಕು, ರಕ್ಷಣೆಯ ಹಕ್ಕು, ವಿಕಾಸ ಮತ್ತು ಅಭಿವೃದ್ಧಿ ಹೊಂದುವ ಹಕ್ಕು, ಮತ್ತು ಭಾಗವಹಿಸುವ ಹಕ್ಕುಗಳನ್ನು ಮಕ್ಕಳು ತಮ್ಮ ಬಾಲ್ಯದಲ್ಲಿ ಅನುಭವಿಸುವಂತಾಗಬೇಕು ಎಂದು ತಿಳಿಸಿದರು. 
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಲೀಗಲ್ ಕಂ ಪ್ರೋಬೇಷನ್ ಅಧಿಕಾರಿ ಶಿವಲೀಲಾ ವನ್ನೂರರವರು ಕೌಟಂಬಿಕ ದೌರ್ಜನ್ಯ ಕಾಯ್ದೆಯಡಿ ನೊಂದಮಹಿಳೆಯರಿಗೆ ಆಪ್ತ ಸಮಾಲೋಚನೆ, ಉಚಿತ ಕಾನೂನು ನೆರವು, ತಾತ್ಕಾಲಿಕ ಆಶ್ರಯ ಮತ್ತು ಕೌಶಲ್ಯಾಭಿವೃದ್ಧಿ ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅನುಷ್ಠಾನಗೊಳಿಸಿದ್ದು ಅಲ್ಲದೇ ಸಂಕಷ್ಠಕೊಳಗಾದ ಮಹಿಳೆಯರ ರಕ್ಷಣೆಗಾಗಿ ಮಹಿಳಾ ಸಹಾಯವಾಣಿ 1091, ಮಕ್ಕಳ ಸಹಾಯವಾಣಿ 1098 ಕ್ಕೆ ಕರೆ ಮಾಡಿ ಸಂಕಷ್ಟದಲ್ಲಿರುವ ಮಹಿಳೆಯರು ಅಥವಾ ಮಕ್ಕಳ ನೆರವಿಗೆ ಸಹಕರಿಸಬಹುದಾಗಿದೆ ಎಂದರು.
Post a Comment