Wednesday, 22 March 2017

ಶ್ರದ್ಧಾ ಭಕ್ತಿಯಿಂದ ದೇವರದಾಸಿಮಯ್ಯ ಜಯಂತಿ ಆಚರಣೆ- ಡಾ. ರುದ್ರೇಶ್ ಘಾಳಿ


ಕೊಪ್ಪಳ ಮಾ. 22 (ಕರ್ನಾಟಕ ವಾರ್ತೆ) : ಆದ್ಯ ವಚನಕಾರ ದೇವರದಾಸಿಮಯ್ಯ ಅವರ ಜಯಂತಿ ಆಚರಣೆಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಲಾಗುತ್ತಿದ್ದು, ಏ. 01 ರಂದು ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಶ್ರದ್ಧಾ ಭಕ್ತಿಯಿಂದ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ ಅವರು ಹೇಳಿದರು.  
 
       ದೇವರದಾಸಿಮಯ್ಯ ಅವರ ಜಯಂತಿ ಆಚರಣೆಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸುವ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. 
 
      ದೇವರದಾಸಿಮಯ್ಯ ಜಯಂತಿ ಉತ್ಸವವನ್ನು  ಏ. 01 ರಂದು ಜಿಲ್ಲಾ ಕೇಂದ್ರವಾಗಿರುವ ಕೊಪ್ಪಳದಲ್ಲಿ ಶ್ರದ್ಧಾ ಭಕ್ತಿಯಿಂದ ಅರ್ಥಪೂರ್ಣವಾಗಿ ಆಚರಿಸಲಾಗುವುದು.  ಕಾರ್ಯಕ್ರಮ.  ಜಯಂತಿ ಅಂಗವಾಗಿ ಅಂದು ಬೆಳಿಗ್ಗೆ 8-30 ಗಂಟೆಗೆ ನಗರದ ಗವಿಮಠ ಆವರಣದಿಂದ ದೇವರದಾಸಿಮಯ್ಯ ನವರ ಭಾವಚಿತ್ರ ಮೆರವಣಿಗೆ ಹೊರಡಲಿದ್ದು, ಮೆರವಣಿಗೆಯು ಗವಿಮಠ ರಸ್ತೆ, ಗಡಿಯಾರ ಕಂಬ, ಜವಾಹರ ರಸ್ತೆ, ಅಶೋಕ ವೃತ್ತ ಮೂಲಕ ಶಾದಿಮಹಲ್ ವರೆಗೂ ಸಾಗಿ ಬರಲಿದೆ.   ಮೆರವಣಿಗೆಯಲ್ಲಿ ಹಲವು ಜಾನಪದ ಕಲಾ ತಂಡಗಳು ಭಾಗವಹಿಸಿ, ಮೆರವಣಿಗೆಯನ್ನು ಆಕರ್ಷಕಗೊಳಿಸಲಿವೆ.    ಅಂದು ಬೆಳಿಗ್ಗೆ 11 ಗಂಟೆಗೆ ನಗರದ ಶಾದಿಮಹಲ್‍ನಲ್ಲಿ ವೇದಿಕೆ ಸಮಾರಂಭ ಜರುಗಲಿದ್ದು, ಸಮಾರಂಭದಲ್ಲಿ ಹಿರಿಯ ಸಾಹಿತಿ ವಿಠ್ಠಪ್ಪ ಗೋರಂಟ್ಲಿ ಅವರು ದೇವರ ದಾಸಿಮಯ್ಯ ಅವರ ಕುರಿತು ವಿಶೇಷ ಉಪನ್ಯಾಸ ನೀಡುವರು.  ಕಾರ್ಯಕ್ರಮದ ಅಂಗವಾಗಿ ಎಸ್‍ಎಸ್‍ಎಲ್‍ಸಿ, ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳೊಂದಿಗೆ ಪಾಸಾದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಗುವುದು.  ಜಯಂತಿ ಆಚರಣೆಯಲ್ಲಿ ಎಲ್ಲ ಸಾರ್ವಜನಿಕರು, ಜನಪ್ರತಿನಿಧಿಗಳು, ವಿವಿಧ ಸಂಘಟನೆಗಳು ಸಕ್ರಿಯವಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು.  ಮೆರವಣಿಗೆ ಹಾಗೂ ಸಮಾರಂಭದಲ್ಲಿ ಎಲ್ಲ ಅಧಿಕಾರಿ, ಸಿಬ್ಬಂದಿಗಳು ತಪ್ಪದೆ ಪಾಲ್ಗೊಳ್ಳಬೇಕು.  ಮೆರವಣಿಗೆ ಸಂದರ್ಭದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್, ಅಗತ್ಯ ಕುಡಿಯುವ ನೀರಿನ ವ್ಯವಸ್ಥೆ, ಮೆರವಣಿಗೆ ಸಾಗಿ ಬರುವ ರಸ್ತೆಯನ್ನು ಸ್ವಚ್ಛಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ ಅವರು ಹೇಳಿದರು.
        ಸಭೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಕೃಷ್ಣಮೂರ್ತಿ ದೇಸಾಯಿ ಸೇರಿದಂತೆ  ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು,  ಸಮಾಜದ ಮುಖಂಡರಾದ ವಿಠ್ಠಪ್ಪ ಗೋರಂಟ್ಲಿ, ಪರಣ್ಣ ಕಾಳ್ಗಿ, ವಾಸು ಕೊಳಗದ, ವೀರಣ್ಣ ಬಂಡಾನವರ್, ವೀರಣ್ಣ ಬೆಟಗೇರಿ, ನಾಗರಾಜ ಬಳ್ಳಾರಿ, ರವಿ ಬುಡ್ಡೋಡಿ, ನೀಲಕಂಠಪ್ಪ ನಾಗಶೆಟ್ಟಿ, ಲಕ್ಷ್ಮಣ ಶಿರವಾರ, ಗಣ್ಯರಾದ ಶಿವಾನಂದ ಹೊದ್ಲೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Post a Comment