Friday, 22 September 2017

ಕುಷ್ಟಗಿ ಮತ್ತು ಯಲಬುರ್ಗಾ ತಾಲೂಕಿನ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು : ರಾಜ್ಯದ 2ನೇ ಅತೀ ದೊಡ್ಡ ಯೋಜನೆಯಾಗಿದೆ : ಬಸವರಾಜ ರಾಯರಡ್ಡಿ


ಕೊಪ್ಪಳ ಸೆ. 22 (ಕರ್ನಾಟಕ ವಾರ್ತೆ) ಕೊಪ್ಪಳ ಜಿಲ್ಲೆಯ ಕುಷ್ಟಗಿ ಮತ್ತು ಯಲಬುರ್ಗಾ ತಾಲೂಕಿನ ಎಲ್ಲ 331 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವ ಈ ಯೋಜನೆಯು ರಾಜ್ಯದ ಅತಿ ದೊಡ್ಡ ಯೋಜನೆಗಳಲ್ಲಿ ಎರಡನೇ ಬಹುದೊಡ್ಡ ಯೋಜನೆಯಾಗಿದೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಹೇಳಿದರು.
ಕೊಪ್ಪಳ ಜಿಲ್ಲಾಡಳಿತ ಹಾಗೂ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸಹಯೋಗದಲ್ಲಿ ಕರ್ನಾಟಕ ಸರ್ಕಾರ ಕೊಪ್ಪಳ ಜಿಲ್ಲೆಯಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಶಂಕುಸ್ಥಾಪನೆ/ ಉದ್ಘಾಟನೆ ಹಾಗೂ ರಾಜ್ಯ ಸರ್ಕಾರದ ಜನಪರ ಯೋಜನೆಗಳ ಫಲಾನುಭವಿಗಳ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕೊಪ್ಪಳ ಜಿಲ್ಲೆಯ ಕುಷ್ಟಗಿ ಮತ್ತು ಯಲಬುರ್ಗಾ ತಾಲೂಕಿನ ಎಲ್ಲ 331 ಗ್ರಾಮಗಳಿಗೆ ರೂ. 763 ಕೋಟಿ ರೂ. ವೆಚ್ಚದಲ್ಲಿ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವ ಈ ಯೋಜನೆ ಕೊಪ್ಪಳ ಜಿಲ್ಲೆಗೆ ಸಂಬಂಧಿಸಿದಂತೆ ಅತ್ಯಂತ ಜನಪರ ಬೃಹತ್ ಯೋಜನೆಯಾಗಿದೆ.  ನಾರಾಯಣಪೂರ ಜಲಾಶಯದ ಹಿನ್ನೀರನ್ನು ಬಳಸಿಕೊಂಡು, ಎರಡೂ ತಾಲೂಕುಗಳ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಲಾಗುವುದು. ಪ್ರತಿ ಒಬ್ಬ ವ್ಯಕ್ತಿಗೆ ಒಂದು ದಿನಕ್ಕೆ 85 ಲೀಟರ್ ಶುದ್ಧ ಕುಡಿಯುವ ನೀರನ್ನು ಕಲ್ಪಿಸಲಾಗುವುದು.  ಈ ಯೋಜನೆ ಸುಮಾರು 6 ಲಕ್ಷ 50 ಸಾವಿರ ಜನಸಂಖ್ಯೆಗೆ ಅನುಕೂಲವಾಗಲಿದೆ.  ಇದನ್ನು ಭವಿಷ್ಯದ 2048 ನೇ ಇಸವಿಯ ವೇಳೆಗೆ ಆಗಲಿರುವ ಜನಸಂಖ್ಯೆಯನ್ನು ಪರಿಗಣನೆಗೆ ತೆಗೆದುಕೊಂಡು ಯೋಜನೆ ರೂಪಿಸಲಾಗಿದೆ.  ಇನ್ನು ತಳಕಲ್ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಕಟ್ಟಡ ನಿರ್ಮಾಣದ ಶಂಕುಸ್ಥಾಪನೆ ಯಾಗಿದ್ದು, ಇದು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಅನುಕೂಲವಾಗಲಿದೆ.  ಗಂಗಾವತಿಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಕಟ್ಟಡ ಉದ್ಘಾಟನೆಯಾಗಿದ್ದು,   ಶೀಘ್ರದಲ್ಲೇ ಪ್ರಾರಂಭಗೊಳ್ಳಲಿದೆ.  ಕೊಪ್ಪಳ ಜಿಲ್ಲೆಯಲ್ಲಿ ಪ್ರಸೂತಿ ಮತ್ತು ಮಕ್ಕಳ ಆರೈಕೆ ಆಸ್ಪತ್ರೆ ಕೊರತೆ ಇದ್ದು, ಈ ಕಾರಣಕ್ಕಾಗಿ ಇಂದು ಕುಕನೂರು ಪಟ್ಟಣದಲ್ಲಿ 60 ಹಾಸಿಗೆಗಳ ಮಹಿಳಾ ಪ್ರಸೂತಿ ಮತ್ತು ಮಕ್ಕಳ ಆಸ್ಪತ್ರೆಯನ್ನು ನಿರ್ಮಾಣ ಮಾಡಲು 09 ಕೋಟಿ ರೂ. ಅನುದಾನ ಒದಗಿಸಲಾಗುತ್ತಿದೆ.   ಸರ್ಕಾರದ ಅನ್ನಭಾಗ್ಯ ಯೋಜನೆಯಲ್ಲಿ ಕೊಪ್ಪಳ ಜಿಲ್ಲೆಯ 45-50 ಸಾವಿರ ಕುಟುಂಬಗಳು ಒಳಗೊಂಡಿದ್ದು, ಒಟ್ಟು 9 ಲಕ್ಷ ಜನರಿಗೆ ಈ ಯೋಜನೆ ಸಹಕಾರಿಯಾಗಿದೆ.  ರೈತರ ಸಾಲ ಮನ್ನಾ ಈ ಯೋಜನೆಯಲ್ಲಿ 8165 ಕೋಟಿ ರೈತರ ಸಾಲ ಮನ್ನಾ ಮಾಡಲಾಗಿದ್ದು, ಜಿಲ್ಲೆಯ 33 ಸಾವಿರ ರೈತರಿಗೆ ಅನುಕೂಲ ವಾಗಿದೆ.  ಕೃಷಿಗಾಗಿ ಸರ್ಕಾರದಿಂದ ಕೊಪ್ಪಳ ಹಾಗೂ ಯಲಬುರ್ಗಾ ತಾಲೂಕಿನ ಗ್ರಾಮಗಳಲ್ಲಿ ಒಟ್ಟು 7 ಸಾವಿರ ಕೃಷಿ ಹೊಂಡಗಳನ್ನು ನಿರ್ಮಿಸಲಾಗಿದ್ದು, ನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಕೊಟ್ಟ ಮಾತಿನಂತೆ ನಡೆಯುತ್ತಿದ್ದೆವೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಹೇಳಿದರು.   
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಮಂತ್ರಿಗಳಾದ ಆರ್.ವಿ. ದೇಶಪಾಂಡೆ ಅವರು ಮಾತನಾಡಿ, ಉದ್ಯೋಗ ಸೃಷ್ಟಿಯಲ್ಲಿ  ರಾಜ್ಯ ಸರ್ಕಾರವು ಸುಮಾರು 5 ಲಕ್ಷ ಯುವಕ/ ಯುವತಿಯರಿಗೆ ಉದ್ಯೋಗ ತರಬೇತಿಯನ್ನು ನೀಡುತ್ತಿದೆ.  ಮುನಿರಾಬಾದ್-ಮಹೆಬೂಬನಗರ  ಹಾಗೂ ಗದಗ- ವಾಡಿ ರೈಲ್ವೆ ಮಾರ್ಗಕ್ಕೆ ರಾಜ್ಯ ಸರ್ಕಾರದಿಂದ ಜಮೀನು ಮತ್ತು ಶೇ.50 ರಷ್ಟು ಅನುದಾನವನ್ನು ನೀಡಲಾಗಿದೆ.  ರೈತರ ಸಾಲ ಮನ್ನಾ ಯೋಜನೆ, ಅನ್ನಭಾಗ್ಯ, ಕೃಷಿಭಾಗ್ಯ, ಕ್ಷೀರದಾರೆ, ಋಣಮುಕ್ತ, ಶ್ಯೂಭಾಗ್ಯ, ಇತ್ಯಾದಿ ಜನಪರ ಯೋಜನೆಗಳನ್ನು ಸರ್ಕಾರ ಜಾರಿಗೊಳಿಸಿದ್ದು, ಅವುಗಳು ಜನಪರ ಯೋಜನೆಗಳಾಗಿವೆ ಎನ್ನುವುದಕ್ಕೆ ಈ ಸಮಾರಂಭ ಸಾಕ್ಷಿಯಾಗಿದೆ ಎಂದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಮಂತ್ರಿಗಳಾದ ಹೆಚ್.ಕೆ ಪಾಟೀಲ್ ಅವರು ಮಾತನಾಡಿ, ಕೊಪ್ಪಳ ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ಸರ್ಕಾರದ ಜನಪರ ಯೋಜನೆಗಳ ಫಲನಾನುಭವಿಗಳ ಸಮಾವೇಶವನ್ನು ಏರ್ಪಡಿಸಲಾಗಿದ್ದು, ಇದೊಂದು ಐತಿಹಾಸಿಕ ಸಮಾವೇಶವಾಗಿದೆ.  ಕಿರು-ನಾಟಕ ಪ್ರದರ್ಶನಗಳ ಮೂಲಕ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ಅರಿವು ಮೂಡಿಸಲಾಗಿದ್ದು ಉತ್ತಮ ಸಂಗತಿಯಾಗಿದೆ.  ಕೊಪ್ಪಳ ಜಿಲ್ಲೆಯನ್ನು ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯನ್ನಾಗಿಸಲು ಕೊಪ್ಪಳ ಜಿಲ್ಲಾ ಪಂಚಾಯತಿ ವತಿಯಿಂದ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು “ಮಿಷನ್-200” ಕಾರ್ಯಕ್ರಮದಡಿಯಲ್ಲಿ ಸುಮಾರು 20 ಸಾವಿರ ಶೌಚಾಲಯಗಳ ನಿರ್ಮಾಣದ ಈ ಕಾರ್ಯವು ರಾಜ್ಯ ಹಾಗೂ ರಾಷ್ಟ್ರಾದ್ಯಂತ ಗಮನ ಸೆಳೆದಿದೆ ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರು ವಹಿಸಿ ಸ್ವಾಗತಿಸಿದರು.   ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ್, ಕಾನೂನು ಸಚಿವ ಟಿ.ಬಿ ಜಯಚಂದ್ರ ಜೈನ್, ಕೊಪ್ಪಳ ಜಿಲ್ಲಾ ಪಂಚಾಯತ ಅಧ್ಯಕ್ಷ ಕೆ. ರಾಜಶೇಖರ ಹಿಟ್ನಾಳ್, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಶಿವರಾಜ್ ಎಸ್. ತಂಗಡಗಿ, ಇಕ್ಬಾಲ್ ಅನ್ಸಾರಿ ಹಾಗೂ ದೊಡ್ಡನಗೌಡ ಪಾಟೀಲ್, ವಿಧಾನ ಪರಿಷತ್ ಸದಸ್ಯ ಬಸವರಾಜ ಪಾಟೀಲ ಇಟಗಿ, ಜಿ.ಪಂ  ಅಧ್ಯಕ್ಷ ರಾಜಶೇಖರ ಹಿಟ್ನಾಳ್, ಉಪಾಧ್ಯಕ್ಷೆ ಲಕ್ಷಮ್ಮ ಎಸ್. ನೀರಲೂಟಿ, ನಗರಸಭೆ ಅಧ್ಯಕ್ಷ ಮಹೇಂದ್ರ ಛೋಪ್ರಾ, ತಾ.ಪಂ ಅಧ್ಯಕ್ಷ ಬಾಲಚಂದ್ರನ್ ಸೇರಿಂದತೆ ಅನೆಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

Post a Comment