Wednesday, 20 September 2017

ಸೆ. 22 ರಂದು ಕೊಪ್ಪಳಕ್ಕೆ ಮುಖ್ಯಮಂತ್ರಿಗಳ ಆಗಮನ : ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ಜನಪರ ಯೋಜನೆ ಫಲಾನುಭವಿಗಳ ಬೃಹತ್ ಸಮಾವೇಶ


ಕೊಪ್ಪಳ ಸೆ. 22 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತ ಹಾಗೂ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ಇವರ ಸಹಯೋಗದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ರಾಜ್ಯ ಸರ್ಕಾರದ ಜನಪರ ಯೋಜನೆಗಳ ಫಲಾನುಭವಿಗಳ ಬೃಹತ್ ಸಮಾವೇಶ ಸೆ. 22 ರಂದು ಬೆಳಿಗ್ಗೆ ಕೊಪ್ಪಳ ನಗರದ ಹೊರವಲಯದಲ್ಲಿ ಹೊಸಪೇಟೆ ಮಾರ್ಗದ ರಾಷ್ಟ್ರೀಯ ಹೆದ್ದಾರಿ ಬದಿಯ ಬೃಹತ್ ಮೈದಾನದಲ್ಲಿ ಆಯೋಜಿಸಲಾಗಿದೆ.
     ಕರ್ನಾಟಕದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಸಮಾರಂಭದ ಉದ್ಘಾಟನೆ ನೆರವೇರಿಸುವರು.  ಅಲ್ಲದೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡುವರು.  ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯ ಸಚಿವ ಆರ್.ವಿ. ದೇಶಪಾಂಡೆ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತಿ ರಾಜ್ ಸಚಿವ ಹೆಚ್.ಕೆ. ಪಾಟೀಲ್, ಲೋಕೋಪಯೋಗಿ ಸಚಿವ ಹೆಚ್.ಸಿ. ಮಹದೇವಪ್ಪ, ಸಮಾಜ ಕಲ್ಯಾಣ ಸಚಿವ ಹೆಚ್. ಆಂಜನೇಯ, ಇಂಧನ ಸಚಿವ ಡಿ.ಕೆ. ಶಿವಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವೆ ಉಮಾಶ್ರೀ, ಕಾರ್ಮಿಕ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಸಂತೋಷ್ ಎಸ್ ಲಾಡ್, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಔಕಾಫ್ ಸಚಿವ ತನ್ವೀರ್ ಸೇಠ್, ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಗೋವಿಂದರಾಜು, ಕೊಪ್ಪಳ ಜಿ.ಪಂ. ಅಧ್ಯಕ್ಷ ಕೆ. ರಾಜಶೇಖರ ಹಿಟ್ನಾಳ, ಸಂಸದ ಕರಡಿ ಸಂಗಣ್ಣ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.  ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಸಮಾರಂಭದ ಅಧ್ಯಕ್ಷತೆ ವಹಿಸುವರು.  ಶಾಸಕರುಗಳಾದ ಶಿವರಾಜ ಎಸ್ ತಂಗಡಗಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ವಿಧಾನಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಅಮರನಾಥ ಪಾಟೀಲ್, ಶರಣಪ್ಪ ಮಟ್ಟೂರ, ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಕುಲಪತಿ ಕರಿಸಿದ್ದಪ್ಪ, ಕೊಪ್ಪಳ ನಗರಸಭೆ ಅಧ್ಯಕ್ಷ ಮಹೇಂದ್ರ ಛೋಪ್ರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೈಯದ್ ಜುಲ್ಲು ಖಾದರ್ ಖಾದ್ರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಮಾ ಮಹದೇವನ್, ಹೈದ್ರಾಬಾದ್-ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಕಾರ್ಯದರ್ಶಿ ಹಾಗೂ ಕಲಬುರಗಿ ಪ್ರಾದೇಶಿಕ ಆಯುಕ್ತ ಹರ್ಷ ಗುಪ್ತ ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು.
ಅಭಿವೃದ್ಧಿ ಕಾರ್ಯಕ್ರಮಗಳ ವಿವರ :
************** ಸೆ. 22 ರಂದು ಮುಖ್ಯಮಂತ್ರಿಗಳಿಂದ ಉದ್ಘಾಟನೆ ಹಾಗೂ ಶಂಕುಸ್ಥಾಪನೆಗೊಳ್ಳಲಿರುವ ವಿವಿಧ ಅಭಿವೃದ್ಧಿ ಯೋಜನೆಗಳ ವಿವರ ಇಂತಿದೆ.  ಕೊಪ್ಪಳ ಜಿಲ್ಲೆಯ ಕುಷ್ಟಗಿ ಮತ್ತು ಯಲಬುಗಾ ತಾಲೂಕಿನ ಗ್ರಾಮಗಳಿಗೆ 763 ಕೋಟಿ ರೂ. ವೆಚ್ಚದಲ್ಲಿ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವ ಯೋಜನೆಗೆ ಶಂಕುಸ್ಥಾಪನೆ.  ಕೊಪ್ಪಳ ಜಿಲ್ಲೆಯ ಯಲಬುರ್ಗಾ ಮತ್ತು ಕೊಪ್ಪಳ ತಾಲೂಕಿನ ಆಯ್ದ ಕೆರೆಗಳಿಗೆ 290 ಕೋಟಿ ರೂ. ವೆಚ್ಚದಲ್ಲಿ ತುಂಗಭದ್ರಾ ನದಿಯ ನೀರನ್ನು ತುಂಬಿಸುವ ಯೋಜನೆಗೆ ಶಂಕುಸ್ಥಾಪನೆ.  ಕೊಪ್ಪಳದಲ್ಲಿ 150 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಸರ್ಕಾರಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್) ಕಟ್ಟಡದ ಉದ್ಘಾಟನೆ.  ಸಿಂಗಟಾಲೂರು ಏತ ನೀರಾವರಿ ಯೋಜನೆಯಡಿ 103 ಕೋಟಿ ರೂ. ವೆಚ್ಚದಲ್ಲಿ ಬನ್ನಿಕೊಪ್ಪ ಏತ ನೀರಾವರಿ ಯೋಜನೆಗೆ ಶಂಕುಸ್ಥಾಪನೆ.  ಯಲಬುರ್ಗಾ ತಾಲೂಕು ತಳಕಲ್ ಬಳಿ 100 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಕಟ್ಟಡದ ಶಂಕುಸ್ಥಾಪನೆ.  32 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಆನೆಗೊಂದಿ ಸೇತುವೆಯ ಉದ್ಘಾಟನೆ.  ಗಂಗಾವತಿಯಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಕಟ್ಟಡದ ಉದ್ಘಾಟನೆ.  ಗಂಗಾವತಿ ತಾಲೂಕು ಚಿಕ್ಕಬೆಣಕಲ್‍ನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಹಾಸ್ಟೆಲ್ ಕಟ್ಟಡದ ಉದ್ಘಾಟನೆ.  ಗಂಗಾವತಿ ಮತಕ್ಷೇತ್ರ ಕೊಪ್ಪಳ ತಾಲೂಕಿನ ಹಿರೇಹಳ್ಳ ಯೋಜನೆಯ ಮುದ್ಲಾಪುರ ಗ್ರಾಮ ಬಳಿ 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಸೇತುವೆಯ ಉದ್ಘಾಟನೆ.  ಯಲಬುರ್ಗಾ ತಾಲೂಕು ಕುಕನೂರು ಪಟ್ಟಣದಲ್ಲಿ 09 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವ 60 ಹಾಸಿಗೆಗಳ ಮಹಿಳಾ ಪ್ರಸೂತಿ ಮತ್ತು ಮಕ್ಕಳ ಆಸ್ಪತ್ರೆಯ ಶಂಕುಸ್ಥಾಪನೆ.  ಹಾಗೂ ಯಲಬುರ್ಗಾ ತಾಲೂಕು ಕುಕನೂರಿನಲ್ಲಿ 05 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ಪ್ರವಾಸಿ ಮಂದಿರದ ಉದ್ಘಾಟನೆಯನ್ನು ಸೆ. 22 ರಂದು ಮುಖ್ಯಮಂತ್ರಿಗಳು ನೆರವೇರಿಸುವರು.
Post a Comment