Wednesday, 27 September 2017

ಶ್ರದ್ಧಾ-ಭಕ್ತಿಯಿಂದ ವಾಲ್ಮೀಕಿ ಜಯಂತಿ ಆಚರಣೆಗೆ ನಿರ್ಧಾರಕೊಪ್ಪಳ ಸೆ. 27 (ಕರ್ನಾಟಕ ವಾರ್ತೆ) : ಆದಿಕವಿ ಮಹರ್ಷಿ ವಾಲ್ಮೀಕಿಯವರ ಜಯಂತಿಯನ್ನು ಅ. 09 ರಂದು ಜಿಲ್ಲಾ ಕೇಂದ್ರದಲ್ಲಿ ಎಲ್ಲ ಸಮುದಾಯದ ಸಹಭಾಗಿತ್ವದಲ್ಲಿ ಶ್ರದ್ಧಾ-ಭಕ್ತಿಯಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು  ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಹೇಳಿದರು.

     ಮಹರ್ಷಿ ವಾಲ್ಮೀಕಿಯವರ ಜಯಂತಿಯನ್ನು ಆಚರಿಸುವ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರದಂದು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
      ಅಕ್ಟೋಬರ್ 09 ರಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಿಲ್ಲಾಡಳಿತವು ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಸಂಭ್ರಮ ಸಡಗರದಿಂದ ಆಚರಣೆ ಮಾಡಲಾಗುವುದು.   ವಾಲ್ಮೀಕಿ ಜಯಂತಿಯ ಅಂಗವಾಗಿ ಅಂದು ಬೆಳಿಗ್ಗೆ 8-30 ಗಂಟೆಗೆ ನಗರದ ಸಿರಸಪ್ಪಯ್ಯನ ಮಠ ಆವರಣದಿಂದ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರದೊಂದಿಗೆ ಅದ್ಧೂರಿ ಮೆರವಣಿಗೆ ಏರ್ಪಡಿಸಲಾಗುವುದು.  ವಾಲ್ಮೀಕಿಯವರ ಭಾವಚಿತ್ರದ ಮೆರವಣಿಗೆ ವೈಭವದ ಸಾರೋಟ್‍ನಲ್ಲಿ ಗಡಿಯಾರ ಕಂಬ, ಜವಾಹರ ರಸ್ತೆ ಮೂಲಕ ಸಾಹಿತ್ಯ ಭವನದವರೆಗೆ ನಡೆಸಲಾಗುವುದು.  ಮೆರವಣಿಗೆಯಲ್ಲಿ ಡೊಳ್ಳು ಕುಣಿತ ಸೇರಿದಂತೆ ವಿವಿಧ ಸಾಂಸ್ಕøತಿಕ ಕಲಾತಂಡಗಳು, ಸ್ತಬ್ಧ ಚಿತ್ರಗಳು ಪಾಲ್ಗೊಂಡು ಮೆರವಣಿಗೆಯನ್ನು ಆಕರ್ಷಕಗೊಳಿಸಲಿವೆ.  ಮೆರವಣಿಗೆಯಲ್ಲಿ ಎಲ್ಲಾ ಸಂಘಟನೆಗಳು, ಜನಪ್ರತಿನಿಧಿಗಳು, ಸಾರ್ವಜನಿಕರು, ಅಧಿಕಾರಿ, ಸಿಬ್ಬಂದಿಗಳು ಭಾಗವಹಿಸಬೇಕು.  ಮೆರವಣಿಗೆಯ ನಂತರ ಬೆಳಿಗ್ಗೆ 11-30 ಗಂಟೆಗೆ ಸಾಹಿತ್ಯ ಭವನದಲ್ಲಿ ಸಮಾರಂಭ ಏರ್ಪಡಿಸಲಾಗಿದ್ದು, ಸಮಾರಂಭದಲ್ಲಿ ಗಣ್ಯಾತಿಗಣ್ಯರೆಲ್ಲರು ಭಾಗವಹಿಸಲಿದ್ದಾರೆ.  ಸಮಾರಂಭದಲ್ಲಿ ಭಾಗವಹಿಸುವ ಗಣ್ಯರಿಗೆ ಹೂವಿನ ಹಾರದ ಬದಲಿಗೆ “ವಾಲ್ಮೀಕಿ ರಾಮಾಯಣ” ಪುಸ್ತಕಗಳನ್ನು ಕಾಣಿಕೆಯಾಗಿ ನೀಡಲಾಗುವುದು.  ಮಹರ್ಷಿ ವಾಲ್ಮೀಕಿಯವರ ಕುರಿತು ಹಾಗೂ ಜಯಂತಿ ಕಾರ್ಯಕ್ರಮದ ಮಹತ್ವ ಕುರಿತಂತೆ ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.    ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಹಾಗೂ ಗಣನೀಯ ಸೇವೆ ಸಲ್ಲಿಸಿದವರಿಗೆ ಸನ್ಮಾನಿಸಲಾಗುವುದು.  ಮೆರವಣಿಗೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಏರ್ಪಡಿಸಲಾಗುವುದು. ಸಾರ್ವಜನಿಕರು, ಸಂಘಟನೆಗಳ ಪದಾಧಿಕಾರಿಗಳು ವಾಲ್ಮೀಕಿ ಜಯಂತಿಯನ್ನು ನಗರದ ಪ್ರಮುಖ ವೃತ್ತಗಳಿಗೆ ದೀಪಾಲಂಕಾರ ಸೇರಿದಂತೆ ಹಬ್ಬದ ವಾತಾವರಣದೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಹೇಳಿದರು.  ವಾಲ್ಮೀಕಿ ಜಯಂತಿ ದಿನದಂದು ಹಾಗೂ ಮುನ್ನಾ ದಿನದಂದು, ನಗರದ ಜವಾಹರ ರಸ್ತೆ ಹಾಗೂ ನಗರದ ಪ್ರಮುಖ ರಸ್ತೆಯನ್ನು ಸ್ವಚ್ಛಗೊಳಿಸಲು ಅಲ್ಲದೆ ಮೆರವಣಿಗೆ ಸಂದರ್ಭದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕೈಗೊಳ್ಳಲು ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
     ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅನೂಪ ಶೆಟ್ಟಿ, ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ ಘಾಳಿ, ಪ್ರೊಬೆಷನರಿ ಐಎಎಸ್ ಅಧಿಕಾರಿ ಪ್ರಾವಿಣ್ಯ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಶ್ರೀಕಾಂತ, ತಹಶಿಲ್ದಾರ ಗುರುಬಸವರಾಜ, ನಗರಸಭೆ ಪೌರಾಯುಕ್ತರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಮಾಜದ ಮುಖಂಡರಾದ ಹನುಮಂತಪ್ಪ ಮಾದಿನೂರ, ಡಾ. ಜ್ಞಾನಸುಂದರ್, ಮಂಜುನಾಥ ಗೊಂಡಬಾಳ, ಶರಣಪ್ಪ ನಾಯಕ, ಶಿವಮೂರ್ತಿ ಗುತ್ತೂರ, ರಮೇಶ ಪಾಟೀಲ, ವಸಂತ ನಾಯಕ, ಚಂದ್ರಕಾಂತ ಅಗಸಿ, ಸುರೇಶ ಡೊಣ್ಣಿ, ಶಾಂತಪ್ಪ ಪೂಜಾರ, ಶ್ರೀನಿವಾಸ ಪೂಜಾರ ಗಿಣಿಗೇರಾ, ಶಂಕರಗೌಡ ಬೆಳಗಟ್ಟಿ, ಗಿರಿಯಪ್ಪ ಡಂಬ್ರಳ್ಳಿ ಹಾಗೂ ಹಲವು ಮುಖಂಡರು, ಗಣ್ಯರಾದ ಶಿವಾನಂದ ಹೊದ್ಲೂರ್, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು. 
Post a Comment