Tuesday, 6 February 2018

ಫೆ. 10 ರಿಂದ ದ್ವಿದಸ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ : ಪರೀಕ್ಷಾ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ- ರವಿ ತಿರ್ಲಾಪುರ


ಕೊಪ್ಪಳ ಫೆ. 06 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ದ್ವಿದಸ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗವು ಫೆ. 10 ಮತ್ತು 11 ರಂದು ಎರಡು ದಿನಗಳ ಕಾಲ ಏರ್ಪಡಿಸಿರುವ ಸ್ಪರ್ಧಾತ್ಮಕ ಪರೀಕ್ಷೆ ಕೊಪ್ಪಳ ಜಿಲ್ಲೆಯ 61 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಯಲ್ಲಿ ಯಾವುದೇ ಅಕ್ರಮಗಳಿಗೆ ಅವಕಾಶ ನೀಡದಂತೆ,   ನ್ಯಾಯ ಸಮ್ಮತವಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಉಪವಿಭಾಗಾಧಿಕಾರಿ ರವಿ ತಿರ್ಲಾಪುರ ಅವರು ಸೂಚನೆ ನೀಡಿದರು.

     ದ್ವಿತೀಯ ದರ್ಜೆ ಸಹಾಯಕರ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರದಂದು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
      ಕರ್ನಾಟಕ ಲೋಕಸೇವಾ ಆಯೋಗವು ದ್ವಿದಸ ಹುದ್ದೆಗಳ ಭರ್ತಿಗಾಗಿ ಫೆ. 10 ಮತ್ತು 11 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸುತ್ತಿದ್ದು, ಜಿಲ್ಲೆಯ 61 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.  ಜಿಲ್ಲೆಯ 17,889 ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಪಾಲ್ಗೊಳ್ಳಲಿದ್ದಾರೆ.  ಪರೀಕ್ಷೆಯಲ್ಲಿ ಯಾವುದೇ ಅಕ್ರಮ ಚಟುವಟಿಕೆ ನಡೆಯದಂತೆ, ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಸಬೇಕು.  ಈ ನಿಟ್ಟಿನಲ್ಲಿ ಪ್ರಶ್ನೆಪತ್ರಿಕೆ ಖಜಾನೆ ಇಲಾಖೆಗೆ ಠೇವಣಿಯಾಗುವುದರಿಂದ ಮೊದಲುಗೊಂಡು, ವಿತರಣೆಯಾಗುವವರೆಗೂ ಎಲ್ಲವನ್ನೂ ವಿಡಿಯೋ ಚಿತ್ರೀಕರಣ ಆಗಬೇಕು.  ಖಜಾನೆಯಿಂದ   ಪ್ರಶ್ನೆಪತ್ರಿಕೆಗಳನ್ನು ತೆಗೆದುಕೊಂಡು ನಿಗದಿತ ಅವಧಿಯೊಳಗೆ ಪರೀಕ್ಷಾ ಕೇಂದ್ರಗಳಿಗೆ ತಲುಪಿಸುವ ಹೊಣೆ ಆಯಾ ಮಾರ್ಗಾಧಿಕಾರಿಗಳಿಗೆ ವಹಿಸಲಾಗಿದ್ದು, ವಿಳಂಬಕ್ಕೆ ಅವಕಾಶವಿಲ್ಲದಂತೆ ಪ್ರಶ್ನೆಪತ್ರಿಕೆಯನ್ನು ನಿಗದಿತ ಅವಧಿಯೊಳಗೆ ತಲುಪಿಸಬೇಕು.   ಪರೀಕ್ಷಾ ಕೇಂದ್ರದೊಳಗೆ ಯಾವುದೇ ಬಗೆಯ ಮೊಬೈಲ್ ಫೋನ್, ಕ್ಯಾಲ್ಕುಲೇಟರ್ ಅಥವಾ ಇನ್ನಿತರೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ.   ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸೂಕ್ತ ಆಸನದ ವ್ಯವಸ್ಥೆ, ಕುಡಿಯುವ ನೀರಿನ ಸಮರ್ಪಕ ವ್ಯವಸ್ಥೆಯನ್ನು ಆಯಾ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.  ಅಲ್ಲದೆ ಪರೀಕ್ಷಾ ದಿನದಂದು ಕೇಂದ್ರಗಳಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಬೇಕು.  ಪ್ರತಿ ಕೇಂದ್ರಕ್ಕೆ ಕಡ್ಡಾಯವಾಗಿ ಒಬ್ಬರು ಮಹಿಳಾ ಪೊಲೀಸ್ ಪೇದೆಯನ್ನು ನಿಯೋಜಿಸಬೇಕು.  ಕೇಂದ್ರದ 200 ಮೀ. ವ್ಯಾಪ್ತಿ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು.  ಪರೀಕ್ಷೆ ನಡೆಸುವುದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗವು ನೀಡಿರುವ ಸೂಚನೆಗಳನ್ನು ಎಲ್ಲ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು.  ಯಾವುದೇ ಅಕ್ರಮಗಳಿಗೆ ಸಂಬಂಧಪಟ್ಟ ಪರೀಕ್ಷಾ ಕೇಂದ್ರ ಮುಖ್ಯಸ್ಥರು, ಅಧಿಕಾರಿಗಳು, ಸಿಬ್ಬಂದಿಗಳನ್ನು ಹೊಣೆಯಾಗಿಸಿ, ಕ್ರಮ ಜರುಗಿಸಲಾಗುವುದು ಎಂದು ಉಪವಿಭಾಗಾಧಿಕಾರಿ ರವಿ ತಿರ್ಲಾಪುರ ಅವರು ಇದೇ ಸಂದರ್ಭದಲ್ಲಿ ಎಚ್ಚರಿಕೆ ನೀಡಿದರು.
ಅಭ್ಯರ್ಥಿಗಳಿಗೆ ಸೂಚನೆ :
*********** ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪರೀಕ್ಷಾ ಪ್ರವೇಶ ಪತ್ರದ ಜೊತೆಗೆ ಭಾವಚಿತ್ರವಿರುವ ಮತದಾರರ ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್ ಅಥವಾ ಡ್ರೈವಿಂಗ್ ಲೈಸೆನ್ಸ್, ಸರ್ಕಾರಿ ನೌಕರರಿದ್ದಲ್ಲಿ, ಇಲಾಖಾ ಗುರುತಿನ ಚೀಟಿ ಇವುಗಳ ಪೈಕಿ ಯಾವುದಾದರೂ ಒಂದು ಗುರುತಿನ ದಾಖಲೆಯಾಗಿ ಕಡ್ಡಾಯವಾಗಿ ತರಬೇಕು. 
     ಪರೀಕ್ಷೆಯ ನೋಡಲ್ ಅಧಿಕಾರಿ ವಿಷಯ ಪರಿವೀಕ್ಷಕ ಬಡದಾನಿ ಮಾತನಾಡಿ, ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಾಗಿ ಸ್ಪರ್ಧಾತ್ಮಕ ಪರೀಕ್ಷೆ ಫೆ.10 ರಂದು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಬೆಳಿಗ್ಗೆ 10 ಗಂಟೆಯಿಂದ 11-30 ರವರೆಗೆ ಕೊಪ್ಪಳದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜರುಗಲಿದ್ದು, 160 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.  ಫೆ. 11 ರಂದು ಸಾಮಾನ್ಯ ಜ್ಞಾನ ವಿಷಯದ ಪರೀಕ್ಷೆ ಬೆಳಿಗ್ಗೆ 10 ಗಂಟೆಯಿಂದ 11-30 ರವರೆಗೆ ಹಾಗೂ ಸಾಮಾನ್ಯ ಕನ್ನಡ/ಸಾಮಾನ್ಯ ಇಂಗ್ಲೀಷ್ ವಿಷಯದ ಪರೀಕ್ಷೆ ಮಧ್ಯಾಹ್ನ 02 ಗಂಟೆಯಿಂದ 03 ರವರೆಗೆ ಜಿಲ್ಲೆಯ 61 ಪರೀಕ್ಷಾ ಕೇಂದ್ರದಲ್ಲಿ ಜರುಗಲಿದ್ದು, 17889 ಅಭ್ಯರ್ಥಿಗಳು ಹಾಜರಾಗಲಿದ್ದಾರೆ.  ಪರೀಕ್ಷಾ ಕೇಂದ್ರಗಳು ಕೊಪ್ಪಳ ತಾಲೂಕಿನಲ್ಲಿ 16 ಇದ್ದು, ಪ್ರಶ್ನೆ ಪತ್ರಿಕೆಗಳನ್ನು ನಿಗದಿತ ಪರೀಕ್ಷಾ ಕೇಂದ್ರಗಳಿಗೆ ತಲುಪಿಸುವ ಸಲುವಾಗಿ 04 ಮಾರ್ಗಾಧಿಕಾರಿಗಳನ್ನು ನೇಮಕ ಮಾಡಿದೆ.  ಗಂಗಾವತಿ ತಾಲೂಕಿನಲ್ಲಿ 24 ಪರೀಕ್ಷಾ ಕೇಂದ್ರಗಳಿದ್ದು, 05 ಮಾರ್ಗಾಧಿಕಾರಿಗಳು.  ಕುಷ್ಟಗಿ ತಾಲೂಕಿನಲ್ಲಿ 09 ಪರೀಕ್ಷಾ ಕೇಂದ್ರಗಳಿದ್ದು, 02 ಮಾರ್ಗಾಧಿಕಾರಿಗಳು ಹಾಗೂ ಯಲಬುರ್ಗಾ ತಾಲೂಕಿನಲ್ಲಿ 12 ಪರೀಕ್ಷಾ ಕೇಂದ್ರಗಳಿದ್ದು, 03 ಮಾರ್ಗಾಧಿಕಾರಿಗಳನ್ನು ನೇಮಿಸಿದೆ.  ಪರೀಕ್ಷೆಗಳ ಪರಿವೀಕ್ಷಣೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ವೀಕ್ಷಕರನ್ನಾಗಿ ನೇಮಿಸಬೇಕಿದೆ.  ಪ್ರಶ್ನೆ ಪತ್ರಿಕೆ ಒಟ್ಟು 04 ಶ್ರೇಣಿಗಳಲ್ಲಿ ಇರಲಿದೆ.  ಪರೀಕ್ಷಾ ಅವಧಿ ಮುಗಿಯುವವರೆಗೂ, ಯಾವುದೇ ಅಭ್ಯರ್ಥಿ ಪರೀಕ್ಷಾ ಕೇಂದ್ರದಿಂದ ಹೊರಗೆ ಬರುವಂತಿಲ್ಲ ಎಂದರು.
    ಸಭೆಯಲ್ಲಿ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮಾರ್ಗಾಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.
Post a Comment