Friday, 23 February 2018

ಫಲಾನುಭವಿಗಳಿಗೆ ಬ್ಯಾಂಕ್ ಸಾಲ ಸರಿಯಾಗಿ ತಲುಪಬೇಕು- ಎಂ. ಕನಗವಲ್ಲಿ


ಕೊಪ್ಪಳ ಫೆ. 23 (ಕರ್ನಾಟಕ ವಾರ್ತೆ): ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಹಲವು ಇಲಾಖೆಗಳ ಮೂಲಕ ಜಾರಿಯಲ್ಲಿರುವ ಯೋಜನೆಗಳಡಿ ಫಲಾನುಭವಿಗಳಿಗೆ ಬ್ಯಾಂಕ್‍ಗಳು ಆದ್ಯತೆ ಮೇರೆಗೆ ಸಾಲ ಸೌಲಭ್ಯವನ್ನು ತಲುಪಿಸಬೇಕು.  ಜಿಲ್ಲಾ ಲೀಡ್ ಬ್ಯಾಂಕ್ ಅಧಿಕಾರಿಗಳು ಈ ಕುರಿತು ನಿಯಮಿತವಾಗಿ ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಸೂಚನೆ ನೀಡಿದರು.

     ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರದಂದು ಏರ್ಪಡಿಸಲಾಗಿದ್ದ ಪ್ರಧಾನಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
     ಅಲ್ಪಸಂಖ್ಯಾತರು ಸೇರಿದಂತೆ ವಿವಿಧ ವರ್ಗಗಳ ಬಡವರಿಗೆ ಸಾಲ ಸೌಲಭ್ಯ ಒದಗಿಸಿ, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿಸಲು ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ.  ಆಯಾ ಇಲಾಖೆಗಳು ಸಾಲ ಸೌಲಭ್ಯಕ್ಕಾಗಿ ಫಲಾನುಭವಿಗಳನ್ನು ಆಯ್ಕೆ ಮಾಡಿ, ಯೋಜನೆ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುತ್ತಿವೆ.  ಆದರೆ ಬ್ಯಾಂಕ್‍ಗಳು ಸಾಲ ಸೌಲಭ್ಯವನ್ನು ಸಂಬಂಧಪಟ್ಟ ಫಲಾನುಭವಿಗಳಿಗೆ ತಲುಪಿಸುವಲ್ಲಿ ಸರಿಯಾಗಿ ಸ್ಪಂದಿಸುತ್ತಿಲ್ಲ ಎನ್ನುವ ಆರೋಪಗಳಿವೆ.  ಹೀಗಾಗಿ ಜಿಲ್ಲಾ ಲೀಡ್ ಬ್ಯಾಂಕ್ ಅಧಿಕಾರಿಗಳು, ಸರ್ಕಾರದ ಯೋಜನೆಗಳು ಜಾರಿಗೊಳ್ಳಲು ನಿಗಾ ವಹಿಸಬೇಕು.  ಸೂಕ್ತವಾಗಿ ಸ್ಪಂದಿಸದ ಬ್ಯಾಂಕ್‍ಗಳ ಬಗ್ಗೆ ಪರಿಶೀಲಿಸಿ, ಫಲಾನುಭವಿಗಳಿಗೆ ಸಾಲ ಸೌಲಭ್ಯ ತಲುಪಿಸಲು ಮುಂದಾಗಬೇಕು.  ಇಲ್ಲದಿದ್ದಲ್ಲಿ ಸರ್ಕಾರದ ಯೋಜನೆಗಳು ಸಫಲವಾಗಲು ಕಷ್ಟಸಾಧ್ಯ. ಪ್ರಸಕ್ತ ವರ್ಷ ಅಲ್ಪಸಂಖ್ಯಾತರಿಗೆ ವಿವಿಧ ಯೋಜನೆಗಳಡಿ 27293 ಫಲಾನುಭವಿಗಳಿಗೆ 314. 15 ಕೋಟಿ ರೂ. ಸಾಲ ಸೌಲಭ್ಯ ತಲುಪಿಸಬೇಕಿತ್ತು.  ಆದರೆ ಕೇವಲ 15000 ಫಲಾನುಭವಿಗಳಿಗೆ 219 ಕೋಟಿ ರೂ. ಮಾತ್ರ ಸೌಲಭ್ಯ ಒದಗಿಸಲಾಗಿದೆ.  ಇನ್ನೂ ಸುಮಾರು 12 ಸಾವಿರ ಫಲಾನುಭವಿಗಳು ಸೌಲಭ್ಯ ಪಡೆಯಲು ಸಾಧ್ಯವಾಗದಿರುವುದು ಕಂಡುಬಂದಿದೆ.  ಜಿಲ್ಲಾ ಲೀಡ್ ಬ್ಯಾಂಕ್ ಅಧಿಕಾರಿಗಳು ಈ ಕುರಿತು ಪರಿಶೀಲಿಸಿ, ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಸೂಚನೆ ನೀಡಿದರು.
     ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ನೇರ ಸಾಲ, ಸ್ವಯಂ ಉದ್ಯೋಗ, ಅರಿವು ಶೈಕ್ಷಣಿಕ ಸಾಲ, ಗಂಗಾ ಕಲ್ಯಾಣ ಯೋಜನೆಗಳಡಿ ಅರ್ಜಿ ಆಹ್ವಾನಿಸಿದ್ದು, ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಿ,  ಫಲಾನುಭವಿಗಳಿಗೆ ಸೌಲಭ್ಯ ದೊರೆಕುವಂತಾಗಲು ಅಗತ್ಯ ಕ್ರಮ ಕೈಗೊಳ್ಳುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರಿಗೆ ಸೂಚನೆ ನೀಡಿದರು.   ಜಿಲ್ಲೆಯಲ್ಲಿ ಬಿದಾಯಿ (ಶಾದಿಭಾಗ್ಯ) ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಮುಸ್ಲಿಂ-1030, ಕ್ರಿಶ್ಚಿಯನ್- 14, ಜೈನ್- 04 ಸೇರಿದಂತೆ ಒಟ್ಟು 1048 ಫಲಾನುಭವಿಗಳಿಗೆ ತಲಾ 50 ಸಾವಿರ ರೂ. ಗಳಂತೆ 524 ಲಕ್ಷ ರೂ. ಗಳ ಅನುದಾನದಡಿ ಸಹಾಯಧನ ನೀಡಲಾಗಿದೆ.  ಕೊಪ್ಪಳ ಮತ್ತು ಗಂಗಾವತಿ ತಾಲೂಕಿನಲ್ಲಿ ಅಲ್ಪಸಂಖ್ಯಾತರ ಸಮುದಾಯದ ಜನಸಂಖ್ಯೆ ಹೆಚ್ಚಿದ್ದು, ಫಲಾನುಭವಿಗಳಿಗೆ ನೀಡುವ ಸೌಲಭ್ಯದ ಭೌತಿಕ ಗುರಿ ಸಾಧನೆ ಹೆಚ್ಚಿನ ಪ್ರಮಾಣದಲ್ಲಿದೆ.  ವರದಿಯಲ್ಲಿ ಈ ಅಂಶವನ್ನು ಸರಿಯಾಗಿ ನಮೂದಿಸಬೇಕು.  ಅಲ್ಪಸಂಖ್ಯಾತರ ವರ್ಗದ ಸರ್ಕಾರಿ ಶಾಲೆಗಳಿಗೆ ಕಟ್ಟಡ ಅಥವಾ ಹೆಚ್ಚಿನ ಕೊಠಡಿಗಳ ನಿರ್ಮಾಣದ ಅಗತ್ಯ ಇದ್ದಲ್ಲಿ, ಈ ಕುರಿತು ಕೂಡಲೆ ಪ್ರಸ್ತಾವನೆಯನ್ನು ಸಲ್ಲಿಸಬೇಕು.  ಅಲ್ಪಸಂಖ್ಯಾತರ ವರ್ಗದ ವಸತಿ ನಿಲಯಗಳಿಗೆ ಜಿಲ್ಲಾ ಮಟ್ಟದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ, ಅಲ್ಲಿನ ಸ್ಥಿತಿ-ಗತಿ ಹಾಗೂ ಸೌಲಭ್ಯ ಲಭ್ಯತೆ ಕುರಿತಂತೆ ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.
     
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟ್ ರಾಜಾ, ಲೀಡ್‍ಬ್ಯಾಂಕ್ ವ್ಯವಸ್ಥಾಪಕ ಬಾಬುರಾವ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೃಷ್ಣ ಉಕ್ಕುಂದ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಮೆಹಮೂದ್ ಸೇರಿದಂತೆ ಹಲವು ಅಧಿಕಾರಿಗಳು ಪಾಲ್ಗೊಂಡಿದ್ದರು.
Post a Comment