Saturday, 10 February 2018

ಮುಖ್ಯಮಂತ್ರಿಗಳಿಂದ ಹುಲಿಗೆಮ್ಮ ದೇವಸ್ಥಾನಕ್ಕೆ ಭೇಟಿ : ದೇವಿಯ ದರ್ಶನ


ಕೊಪ್ಪಳ ಫೆ. 10 (ಕರ್ನಾಟಕ ವಾರ್ತೆ): ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಈ ಭಾಗದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಸ್ಥಾನಕ್ಕೆ ಶನಿವಾರದಂದು ಭೇಟಿ ನೀಡಿ ದೇವಿಯ ದರ್ಶನ ಪಡೆದುಕೊಂಡರು.
     ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಹುಲಿಗಿಯ ಹುಲಿಗೆಮ್ಮ ದೇವಿ ದೇವಸ್ಥಾನಕ್ಕೆ ರಾಹುಲ್‍ಗಾಂಧಿ ಅವರು ಭೇಟಿ ನೀಡಿದ ನಿಮಿತ್ಯ, ಅವರೊಂದಿಗೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡ ದೇವಸ್ಥಾನಕ್ಕೆ ಭೇಟಿ ನೀಡಿ, ಹುಲಿಗೆಮ್ಮ ದೇವಿಯ ದರ್ಶನ ಪಡೆದುಕೊಂಡರು.  ಈ ಸಂದರ್ಭದಲ್ಲಿ ದೇವಸ್ಥಾನದ ಆವರಣದಲ್ಲಿ ಡೊಳ್ಳು ಕುಣಿತ ಕಲಾವಿದರೊಂದಿಗೆ ಬೆರೆತು, ತಾವೂ ಡೊಳ್ಳು ಮೇಳದೊಂದಿಗೆ ಪಾಲ್ಗೊಂಡು ಸಂಭ್ರಮಿಸಿದರು.  ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರು ಕೂಡ, ಡೊಳ್ಳು ಬಾರಿಸುವ ಮೂಲಕ, ಮುಖ್ಯಮಂತ್ರಿಗಳಿಗೆ ಸಾಥ್ ನೀಡಿದರು.  ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ, ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ, ಜಿ.ಪಂ. ಅಧ್ಯಕ್ಷ ರಾಜಶೇಖರ ಹಿಟ್ನಾಳ, ಜಿ. ಪರಮೇಶ್ವರ್ ಸೇರಿದಂತೆ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.  ನಂತರ ಕೊಪ್ಪಳಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು, ಜಿಲ್ಲಾಡಳಿತ ಭವನದ ಬಳಿ ಸಾರ್ವಜನಿಕರನ್ನು ಭೇಟಿ ಮಾಡಿದರು.  ನಗರಸಭೆ ಅಧ್ಯಕ್ಷ ಮಹೇಂದ್ರ ಚೋಪ್ರಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Post a Comment