Wednesday, 16 May 2018

ಪ್ರತಿಷ್ಠಿತ ಶಾಲೆಗಳ ಪ್ರವೇಶ : ಪ.ಜಾ/ ಪ. ವರ್ಗದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ


ಕೊಪ್ಪಳ ಮೇ. 16 (ಕರ್ನಾಟಕ ವಾರ್ತೆ): ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳನ್ನು 6ನೇ ತರಗತಿಗೆ ಆಯ್ಕೆ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೊಪ್ಪಳ ಜಿಲ್ಲೆಯ ಕುಕನೂರಿನ ವಿದ್ಯಾಶ್ರೀ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಕೊಪ್ಪಳದ ಎಸ್.ಎಫ್.ಎಸ್. ಪ್ರೌಢಶಾಲೆ, ಲಾಯನ್ಸ್ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆ, ಹಾಗೂ ಗಂಗಾವತಿಯ ಬೇಥಲ್ ಪ್ರೌಢಶಾಲೆ, ಈ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಪರೀಕ್ಷೆಯ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ದಾಖಲಿಸಲಾಗುವುದು. 
ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಕ್ಕೆ ಸೇರಿದರಾಗಿರಬೇಕು.  ಕುಟುಂಬದ ವಾರ್ಷಿಕ ಆದಾಯ ರೂ. 02 ಲಕ್ಷದೊಳಗಿರಬೇಕು.  ವಿದ್ಯಾರ್ಥಿಯು 5ನೇ ತರಗತಿಯಲ್ಲಿ ಶೇ.60 ಅಂಕ ಪಡೆದಿರಬೇಕು.  ಅರ್ಹ ವಿದ್ಯಾರ್ಥಿಗಳ ಆಯ್ಕೆಯನ್ನು ಪ್ರವೇಶ ಪರೀಕ್ಷೆಯ ಮುಖಾಂತರ ಆಯ್ಕೆ ಮಾಡಲಾಗುವುದು.  ಆಯ್ಕೆಯಾಗುವ ವಿದ್ಯಾರ್ಥಿಗಳಲ್ಲಿ ಬಾಲಕಿಯರಿಗೆ ಶೇ.50 ರಷ್ಟು ಮೀಸಲಾತಿಯನ್ನು ನೀಡಲಾಗುವುದು.  ಒಟ್ಟು ಆಯ್ಕೆಯಾಗುವ ವಿದ್ಯಾರ್ಥಿಗಳಲ್ಲಿ ಶೇ.50 ರಷ್ಟು ಗ್ರಾಮೀಣ ವಿದ್ಯಾರ್ಥಿಗಳಿಗೆ ಮೀಸಲಿಡಲಾಗುವುದು.  ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಇರುವುದಿಲ್ಲ. 
     ಅರ್ಜಿ ಸಲ್ಲಿಸಲು ಮೇ. 30 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆಗಳನ್ನು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ, ಗಂಗಾವತಿ, ಯಲಬುರ್ಗಾ, ಕುಷ್ಟಗಿ ಹಾಗೂ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಗಂಗಾವತಿ, ಕುಷ್ಟಗಿ ಇವರಿಂದ ಪಡೆದು, ಅದರೊಂದಿಗೆ 5ನೇ ತರಗತಿಯಲ್ಲಿ ಶೇ.60 ಅಂಕ ಪಡೆದಿರುವ ಬಗ್ಗೆ ಹಾಗೂ ಕುಟುಂಬದ ವಾರ್ಷಿಕ ಆದಾಯ ಪ್ರಮಾಣ ಪತ್ರದ ತಹಶೀಲ್ದಾರರವರಿಂದ ಪಡೆದ ಧೃಡೀಕೃತ ನಕಲು ಪ್ರತಿಯನ್ನು ಲಗತ್ತಿಸಿ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ ಹಾಗೂ ಆಯಾ ತಾಲೂಕಿನ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಹಾಗೂ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳಿಗೆ ಸಂಪರ್ಕಿಸಬಹುದು ಎಂದು ಇಲಾಖಾ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Post a Comment